Publish Date: Thu, 09 Feb 2023 (18:35 IST)
Updated Date: Thu, 09 Feb 2023 (18:39 IST)
ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ. ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ.ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ.
ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.