ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ದಿನಗಳಿಂದ ರಾಜ್ಯದ ಜನರಿಗೆ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದಾನೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆ ಹಾಗೂ ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿ ಮೂರು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.