Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಲಾಗಿದೆ.
ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.
ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್ ಹೇಳಿದೆ. ನ್ಯಾಯಪೀಠವು 8 ನಿಮಿಷದಲ್ಲಿ ತೀರ್ಪು ಓದಿ ಮುಗಿಸಿತು.
ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ಪೂರ್ಣಪೀಠ ಫೆ.25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವ ಮೂಲಕ ಹಿಜಾಬ್ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದೆ.