Publish Date: Wed, 13 Sep 2023 (10:09 IST)
Updated Date: Wed, 13 Sep 2023 (10:10 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಗೆ ನೋಟಿಸ್ ನೀಡಲಾಗಿದೆ.
ಎಐಸಿಸಿ ಶಿಸ್ತು ಸಮಿತಿಯಿಂದ ಈ ನೋಟಿಸ್ ನೀಡಲಾಗಿದ್ದು, 10 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಹರಿಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ.
ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂತಾ ಹೇಳಿದರೆ ಆಗುವುದಿಲ್ಲ. ದೇವರಾಜ ಅರಸು ಕಾರಿನಲ್ಲಿ ಹೋದಾಕ್ಷಣ ದೇವರಾಜು ಅರಸು ಆಗುವುದಿಲ್ಲ, ಅವರ ಚಿಂತನೆ ಇರಬೇಕು ಎಂದಿದ್ದರು.
ಈ ಸಂಬಂಧ ಹೈಕಮಾಂಡ್ ಬಳಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ಹೊರ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹರಿಪ್ರಸಾದ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.