ಬೆಂಗಳೂರು : ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಇಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧ ಸಂಬಂಧ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ, ಆನ್ ಲೈನ್ ಗೇಮ್ ನಿಷೇಧಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಸರ್ಕಾರ ಸದನದಲ್ಲಿ ತಿದ್ದುಪಡಿ ಕಾಯಿದೆ ಮಂಡಿಸಲಿದೆ ಎಂದರು.
ಇದೇ ವೇಳೆ, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಕುರಿತ ನಿರ್ಧಾರವನ್ನು ಸಂಪುಟ ಸಹುದ್ಯೋಗಿ ಸಚಿವರು ಸಿಎಂ ವಿವೇಚನೆಗೆ ಬಿಟ್ಟಿದ್ದಾರೆ. ಈ ಬಗ್ಗೆ ಸಿಎಂ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ನಾಳೆ ಈ ಸಂಬಂಧ ತಜ್ಞರ ಜತೆ ಸಭೆ ನಡೆಸಿದ ಬಳಿಕ ಅಂತಿಮ ತೀರ್ಮಾನ ತಿಳಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಮೈಸೂರು ಅರಮನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಲೋಕಾಯುಕ್ತ ಪ್ರಕರಣಗಳ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಪ್ರಕರಣ ಕೈಬಿಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದರು. ಹೇಮಾವತಿ ನಾಲೆಯಿಂದ ಚಿಕ್ಕನಾಯಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ 98.50 ಕೋಟಿ ಬಿಡುಗಡೆಗೆ ನಿರ್ಧಾರ ಕೈಗೊಳ್ಳಳಾಗಿದೆ ಎಂದರು.