ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪತ್ತೆ ಹಿನ್ನಲೆಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಬೊಮ್ಮಾಯಿ ಅವರು ಸಭೆ ನಡೆಸುತ್ತಿದ್ದಾರೆ.
ವಿಧಾನಸಭೆಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಡಿಜಿ-ಐಜಿ ಪ್ರವೀಣ್ ಸೂದ್, ಪೊಲೀಸ್ ಆಯುಕ್ತ ಕಮಲ್ ಪಂತ್ . ಭಾಸ್ಕರ್ ರಾವ್ ಸೇರಿ ಹಲವರು ಭಾಗಿಯಾಗಿದ್ದು, ಡ್ರಗ್ಸ್ ಜಾಲವನ್ನು ನಿಯಂತ್ರಿಸುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಚಿವರು ಚರ್ಚೆ ನಡೆಸಲಿದ್ದಾರೆ.
ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೊಮ್ಮಾಯಿ ಅವರು, ಡ್ರಗ್ಸ್ ಜಾಲವನ್ನು ನಿಯಂತ್ರಿಸುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ನಿರ್ದೇಶಕ ಇಂದ್ರಜಿತ್ ಲಂಕೇಶ್ ರನ್ನು ವಿಚಾರಣೆಗೆ ಕರೆದಿದ್ದೇವೆ. ಅವರು ನೀಡಿರುವ ಮಾಹಿತಿಯನ್ನು ಪಡೆದುಕೊಳ್ಳಲಾಗುವುದು. ನಮ್ಮ ಬಳಿಯೂ ಕೆಲವು ಮಾಹಿತಿ ಇದೆ. ಎಲ್ಲವನ್ನೂ ಪರಿಶೀಲನೆ ಮಾಡಲು ಸೂಚಿಸಿದ್ದೇನೆ. ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದ್ದಾರೆ.