ಬೆಂಗಳೂರು: ಭಾರತೀಯ ಸೇನೆಯ ಪ್ರತಿಕಾರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನ ಯಶಸ್ವಿಯಾಗಿ ನಡೆಸಿದೆ. ಸೇನೆಯ ಯಶಸ್ವಿ ಕಾರ್ಯಾಚರಣೆಯಿಂದ ದೇಶದಾದ್ಯಂತ ಎಲ್ಲಾ ಭಾಗದ ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಇದರ ಜೊತೆಗೆ ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಶುಭಾಶಯ ಕೋರಿದ್ದಾರೆ. ಜೊತೆಗೆ ದೇವಸ್ಥಾನಗಳಲ್ಲಿ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚನೆ ನೀಡಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಮಾನ್ಯ ಸಚಿವರ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ.ಎಂ.ವಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಆಪರೇಷನ್ ಸಿಂಧೂರದ ಯಶಸ್ವಿ ಕಾರ್ಯಾಚರಣೆಗೆ ಇಡೀ ದೇಶಾದ್ಯಂತ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಬೆಂಗಳೂರಲ್ಲಿ ಸಾರ್ವಜನಿಕರು ಮತ್ತು ವೀರ ಕನ್ನಡಿಗರ ಘರ್ಜನೆ ಸೇನೆ, ತೆಂಗಿನ ಕಾಯಿ ಒಡೆದು ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ಬರಲಿ ಅಂತ ಪ್ರಾರ್ಥನೆ ಮಾಡಿದ್ದಾರೆ.