ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕೈ ಮುಗಿತೀನಿ ಕಾವೇರಿ ಬಗ್ಗೆ ಏನು ಕೇಳಬೇಡಿ ಎಂದು ಸಚಿವ ಆರ್.ವಿ.ದೇಶಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದ ನೂರು ವರ್ಷಗಳಷ್ಟು ಹಳೆಯದಾಗಿದ್ದು, ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಉಭಯ ರಾಜ್ಯಗಳ ನಡುವಿನ ಜಲ ವಿವಾದವನ್ನು ಇತ್ಯರ್ಥಗೊಳಿಸಲಿ ಎಂದು ಆಗ್ರಹಿಸಿದರು.
ಕಾವೇರಿ ವಿವಾದದಲ್ಲಿ ಕಾನೂನು ಹೋರಾಟ ನಡೆಸುವಲ್ಲಿ ರಾಜ್ಯ ಸರಕಾರ ವಿಫಲವಾಗಿಲ್ಲ. ರಾಜ್ಯ ಸರಕಾರ ತಮಿಳುನಾಡಿಗೆ ನೀರು ಹರಿದುಬಿಡುವುದನ್ನು ತಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್, ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರ ವಕೀಲರಾದ ಫಾಲಿ ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಕಾವೇರಿ ಜಲಾಶಯಗಳ ಬಗ್ಗೆ ವಾಸ್ತವ ಮಾಹಿತಿಯ ದಾಖಲೆಗಳನ್ನು ನೀಡಿದ್ದಾರೆ. ಮುಂಬರುವ ಅಕ್ಟೋಬರ್ 18 ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆ ಸಂದರ್ಭದಲ್ಲಿ ತೀರ್ಪು ಕರ್ನಾಟಕದ ಪರವಾಗಿ ಬರುವ ವಿಶ್ವಾಸವಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ