ಬೆಂಗಳೂರು : ಬೆಲೆ ಏರಿಕೆ ವಿಚಾರ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ತಿರುಗೇಟು ನೀಡಲಿದ್ದಾರೆ.
ಬೆಲೆ ಏರಿಕೆ ವಿಚಾರ ವಿರುದ್ಧ ಬುಧವಾರ ವಿರೋಧ ಪಕ್ಷಗಳು ಹಾಗೂ ಸದನದ ಇತರೆ ಸದಸ್ಯರು ಧ್ವನಿ ಎತ್ತಿದ್ದು, ಅಂದಿನಿಂದಲೂ ಸದನದಲ್ಲಿ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಾಯಕನ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇದೆ.
ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಜಿಲ್ಲೆಯ ಪ್ರವಾಸದಲ್ಲಿದ್ದು, ಸೋಮವಾರ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರ ವಿರೋಧ ಪಕ್ಷಗಳ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದ್ದಾರೆ.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಸಂಪುಟ ಸಭೆ ನಡೆಸಲಿದ್ದು, ಸಭೆಯಲ್ಲಿ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಯಾವ ರೀತಿ ಪ್ರತಿಕ್ರಿಯೆ ನೀಡಬೇಕೆಂಬುದನ್ನು ಚರ್ಚಿಸಲಿದ್ದಾರೆಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಸದನದಲ್ಲಿ ಮಾತನಾಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ತಮಿಳುನಾಡು ಸರ್ಕಾರ ಮಾಡಿದಂತೆ ತೈಲ ಬೆಲೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರವು ಮಾರಾಟ ತೆರಿಗೆಯನ್ನು ಕಡಿತಗೊಳಿಸುವುದರ ಜೊತೆಗೆ ಪೆಟ್ರೋಲಿಯಂ ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡುವ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಲು ಒಪ್ಪಿಕೊಳ್ಳಬೇಕೆಂದು ಒತ್ತಾಯಿಸಿದ್ದರು.
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು, ಬೆಲೆ ಏರಿಕೆಯನ್ನು ನಿರಂತರ ಪ್ರಕ್ರಿಯೆ ಎಂದು ಕರೆದಿದ್ದರು. ಅಲ್ಲದೆ, ಕೋವಿಡ್-19 ಮತ್ತು ಬೆಲೆ ಏರಿಕೆಯಿಂದ ಬಾಧಿತವಾದ ಸುಮಾರು 50,000 ಕುಟುಂಬಗಳಿಗೆ ತಲಾ 25,000 ರೂಪಾಯಿಗಳ ಪ್ಯಾಕೇಜ್ ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು.