Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಸ್ತೆ ದುರಸ್ತಿ-ವಸತಿ ಯೋಜನೆಗೆ ಆದ್ಯತೆ ನೀಡಿ; ಬೊಮ್ಮಾಯಿ ಸೂಚನೆ

ರಸ್ತೆ ದುರಸ್ತಿ-ವಸತಿ ಯೋಜನೆಗೆ ಆದ್ಯತೆ ನೀಡಿ; ಬೊಮ್ಮಾಯಿ ಸೂಚನೆ
ಬೆಂಗಳೂರು , ಬುಧವಾರ, 18 ಆಗಸ್ಟ್ 2021 (08:27 IST)
ಬೆಂಗಳೂರು (ಆಗಸ್ಟ್ 18); ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು.

ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ದುರಸ್ತಿ ಮಾಡುವಂತೆ ಸೂಚನೆ ನೀಡಲಾಯಿತು. ಪ್ರತಿ ಜಿಲ್ಲೆಯ ರಸ್ತೆಗಳ ಸಾಂದ್ರತೆಯನ್ನು ಪರಿಶೀಲಿಸಿ, ಕಡಿಮೆ ಇರುವ ಜಿಲ್ಲೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಕೃಷ್ಣಾರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಗ್ರಾಮೀಣ ವಸತಿ ಯೋಜನೆ ತ್ವರಿತವಾಗಿ ಫಲಾನುಭವಿಗಳ ವಿವರ ದಾಖಲಿಸಲು ಸೂಚನೆ;
ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್ ಲೋಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ-(ನಗರ) ಎಎಚ್ ಪಿ- 1.8 ಲಕ್ಷ ಮನೆಗಳು ಕಾಮಗಾರಿ ಪ್ರಾರಂಭವಾಗಿಲ್ಲ. ಈ ಯೋಜನಗೆ ಎಸ್ ಸಿ ಎಸ್ ಪಿ/ ಟಿಎಸ್ ಪಿ, ಹಿಂದುಳಿದ ವರ್ಗಗಳು ಹಾಗೂ ಕಾರ್ಮಿಕ ಫಲಾನುಭವಿಗಳ ವಂತಿಗೆ ಮೊತ್ತವನ್ನು ಆಯಾ ಇಲಾಖೆಗಳ ಯೋಜನೆಗಳಡಿ ಪಡೆದುಕೊಂಡು, ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಬೆಂಗಳೂರು ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡಿ 42,361 ಮನೆ ನಿರ್ಮಾಣವಾಗುತ್ತಿದ್ದು ಬಾಕಿ ಮನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸುವಂತೆ ತಿಳಿಸಿದರು. ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಗಳಡಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆಗೆ ಸಿದ್ಧತೆ ನಡೆಸಿಕೊಳ್ಳುವಂತೆ ತಿಳಿಸಿದರು.
ಪ್ರವಾಹ ಸಂದರ್ಭದಲ್ಲಿ ಮನೆ ಹಾನಿಗೆ ನೀಡಬೇಕಾದ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ತಿಳಿಸಿದರು. ವಸತಿ ಸಚಿವ ವಿ. ಸೋಮಣ್ಣ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಕಾರ್ಯದರ್ಶಿ ವಿ. ಪೊನ್ನುರಾಜ್, ವಸತಿ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಲಹೆ