ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಇಂದು ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಮುಲ್ಕಿಯಲ್ಲಿ 16 ಸೆಂ.ಮೀ, ಕಲಬುರಗಿಯಲ್ಲಿ 11 ಸೆಂ.ಮೀ, ಮಂಗಳೂರು, ಸುಬ್ರಹ್ಮಣ್ಯ, ಬೆಳಗಾವಿಯಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ. ಜು.11, 2021ರಂದು ಬಂಗಾಳ ಉಪ ಸಾಗರದ ಪಶ್ಚಿಮ ಮಧ್ಯ ಭಾಗದಲ್ಲಿ ವಾಯುಭಾರ ಕುಸಿತ ಆಗಲಿದೆ. ಇದರಿಂದ ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 10 ರಿಂದ 14ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದರು.
ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಜುಲೈ 10,11ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 12 ಮತ್ತು 13 ರಂದು ಆರೇಂಜ್ ಅಲರ್ಟ್ ಹಾಗೂ ಜುಲೈ 14 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಿಜಾಪುರ, ಯಾದಗಿರಿ, ರಾಯಚೂರು,ಬೀದರ್, ಕಲಬುರ್ಗಿ ಹಾಗೂ ಚಾಮರಾಜನಗರದಲ್ಲಿ ಭಾರೀ ಮಳೆ ನಿರೀಕ್ಷಿಸಿರುವುದರಿಂದ ಜು.10 ರಿಂದ 14ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದರು.