ನಗರದಲ್ಲಿ ಭಾರೀ ಮಳೆಯಿಂದಾಗಿ ಗುಂಡಿ ಬಿದ್ದಿದ್ದ ರಸ್ತೆಗಳನ್ನು ಮಾ.31ರೊಳಗೆ ಮುಚ್ಚಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡದಿದ್ದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
ಸಾರ್ವಜನಿಕರು ಇಡೀ ಶಾಪ ಹಾಕುತ್ತಿದ್ದಾರೆ. ಇದನ್ನು ಮುಚ್ಚಲು ನಿಮಗೆ ಸಮಸ್ಯೆಯಾದರು ಏನು ಎಂದು ಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬೆಂಗಳೂರು ಅಭಿವೃದ್ಧಿ ಕುರಿತಂತೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರ ಬಿಬಿಎಂಪಿ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಗರದ ಒಟ್ಟು 700 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ. ಮಾ.31ರೊಳಗೆ ಇವುಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ಒಂದು ವೇಳೆ ಉದಾಸೀನ ತೋರಿದರೆ ಅಂಥವರ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟರು.
ಜ.31ರೊಳಗೆ ನಗರದಲ್ಲಿ ಬೀದಿ ದೀಪಗಳನ್ನು ಬದಲಾಯಿಸಿ ಬಿಬಿಎಂಪಿಯಿಂದ ಎಲ್‍ಇಡಿ ದೀಪಗಳನ್ನು ಅಳವಡಿಸಲಾಗುವುದು. ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ 7 ಸಾವಿರ ಸಿಸಿಟಿವಿಗಳನ್ನು ಅಳವಡಿಕೆ ಮಾಡುವುದಾಗಿ ಹೇಳಿದರು. ಬಿಬಿಎಂಪಿ ವಾರ್ಡ್‍ಗಳಲ್ಲಿ 150 ಎಂಜಿನಿಯರ್‍ಗಳನ್ನು ಸದ್ಯಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಮೂರ್ನಾಲ್ಕು ತಿಂಗಳೊಳಗೆ ಈ ಪ್ರಕ್ರಿಯೆ ಮುಗಿಯಲಿದೆ ಎಂದರು.