ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಾಪಸ್ ಆಗಲು ನಿರ್ಧರಿಸಿದ್ದಾರೆ. ಹೀಗಾಗಿ ವರುಣಾ ಕ್ಷೇತ್ರದಿಂದ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸಲಿದ್ದು, ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಶಂಕರ್ ಬಿದರಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇತ್ತೀಚೆಗೆ ಯತೀಂದ್ರ ವರುಣಾ ಕ್ಷೇತ್ರದಲ್ಲಿ ಜನಪರ ಕಾರ್ಯಗಳಲ್ಲಿ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಮುಂದಿನ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಯತೀಂದ್ರಗೆ ಪ್ರಬಲ ಸ್ಪರ್ಧೆ ನೀಡುವ ಸಲುವಾಗಿ ಲಿಂಗಾಯತ ಸಮುದಾಯದ ನಾಯಕ, ಮಾಜಿ ಪೊಲೀಸ್ ಅಧಿಕಾರಿ ಶಂಕರ ಬಿದರಿಯನ್ನು ಕಣಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.
ಇದೇ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತ ಕಾ.ಪು.ಸಿದ್ದಲಿಂಗ ಸ್ವಾಮಿ ಸಹ ಉತ್ಸುಕರಾಗಿದ್ದಾರೆ. ಆದರೆ ಇವರಿಗೆ ಟಿಕೆಟ್ ನೀಡಲು ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.