ಬೆಂಗಳೂರು : ಕರ್ನಾಟಕದಲ್ಲಿ ನೆರೆ ಅಥವಾ ಬರ ಪರಿಸ್ಥಿತಿ ಎದುರಾದ ಸಂದರ್ಭಗಳಲ್ಲಿ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದಾಗಿ ರಾಜ್ಯಕ್ಕೆ 40 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಆದರೆ, ಈ ಅಂಕಿ-ಅಂಶವನ್ನು ತಳ್ಳಿ ಹಾಕಿರುವ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಸುಮಾರು 1 ಲಕ್ಷ ಕೋಟಿ ರೂ. ನಷ್ಟವಾಗಿದೆ ಎಂದು ಹೇಳಿದ್ದರು. ಆದರೆ, ಕೇಂದ್ರ ಸರ್ಕಾರದಿಂದ 100 ಕೋಟಿ ರೂ. ನೀಡಿದ್ದು ಬಿಟ್ಟರೆ ಬೇರಾವ ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಕರ್ನಾಟಕದಲ್ಲಿ ನೆರೆ ಅಥವಾ ಬರ ಪರಿಸ್ಥಿತಿ ಎದುರಾದ ಸಂದರ್ಭಗಳಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿರಲಿಲ್ಲ. ರಾಜ್ಯದ ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿರಲಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಾಕ್ರೋಶ ವ್ಯಕ್ತಪಡಿಸಿದ್ದಾರೆ.