ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಅವರ ರಾಜೀನಾಮೆಗೆ ಪ್ರತಿಭಟನೆ ನಡೆಸುತ್ತಿದೆ.
ವಿಶೇಷವೆಂದರೆ ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದೊಳಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಾರೆ. ಒಳಗೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿದ್ದರೆ ಹೊರಗೆ ಬಿಜೆಪಿ ನಾಯಕರು ಗಾಂಧಿ ಪ್ರತಿಮೆ ಬಳಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.
ಕೆಲವು ಹೊತ್ತು ಇಲ್ಲಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಲಿರುವ ಬಿಜೆಪಿ ನಾಯಕರು ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಯೋಜನೆ ಹಾಕಿಕೊಂಡಿದ್ದಾರೆ. ಆದರೆ ಬಿಜೆಪಿ ನಾಯಕರನ್ನು ತಡೆಯಲು ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಇನ್ನೊಂದೆಡೆ ಇಂದಿನ ಬಿಜೆಪಿ ಪ್ರತಿಭಟನೆಗೆ ಬಹುತೇಕ ಶಾಸಕರು, ಸಂಸದರೂ ಆಗಮಿಸಿದ್ದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದಿನ ಪ್ರತಿಭಟನೆಗೆ ಗೈರಾಗಿದ್ದರು. ಅವರು ಅನಾರೋಗ್ಯದ ಕಾರಣದಿಂದ ಇಂದು ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ.