ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಪದಚ್ಯುತಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಮುಖ್ಯಮಂತ್ರಿಗಳ ಅಧಿಕೃತ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪ್ರತಿಭಟನಾಕಾರರು ರೇಸ್ ಕೋರ್ಸ್ ರಸ್ತೆ ದಾಟದಂತೆ ಪೊಲೀಸರು ಬ್ಯಾರಿಕೇಟ್ಗಳನ್ನು ಅಳವಡಿಸಿದರು. ಈ ವೇಳೆ ಬ್ಯಾರಿಕೇಟನ್ನು ಮುರಿದು ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ, ನೂಕಾಟ, ವಾಗ್ವಾದ ನಡೆಯಿತು.