ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ಕುರಿತು ಸರ್ವಪಕ್ಷ ಸಭೆ ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸದಂತೆ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದ್ದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆದು ಎಲ್ಲಾ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಉಭಯ ರಾಜ್ಯಗಳ ನಡುವಿನ ಜಲ ವಿವಾದವನ್ನು ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥಗೊಳಿಸಿಕೊಳ್ಳುವಂತೆ ಸಲಹೆ ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ವಿವಾದವನ್ನು ಬಗೆಹರಿಸಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ