ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿದೆ. ಬಿರು ಬೇಸಿಗೆಯಲ್ಲೂ ಕೆಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ನಡುವೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ದಿನ ಕಳೆದ ಹಾಗೆ ಬೆಂಗಳೂರಿನ ವಾತಾವರಣದಲ್ಲೂ ಬದಲಾವಣೆಯಾಗುತ್ತಿದೆ. ಇಂದು ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಹೀಟ್ ವೇವ್ ಆತಂಕ ಶುರುವಾಗಿದೆ. ಕಳೆದ ಶನಿವಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38-39ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾದರೆ, ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಜಧಾನಿ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಇತ್ತು. ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದಾರೆ. ಸದ್ಯ ಬೆಂಗಳೂರಿನ ತಾಪಮಾನ ಮುಂಬರುವ ತಿಂಗಳುಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ವಾಯವ್ಯ ಮತ್ತು ಪರ್ಯಾಯ ದ್ವೀಪ ಪ್ರದೇಶಗಳನ್ನು ಹೊರತುಪಡಿಸಿದರೆ ಭಾರತದ ಬಹುತೇಕ ಪ್ರದೇಶಗಳಲ್ಲಿ ಏಪ್ರಿಲ್ನಿಂದ ಜೂನ್ ತಿಂಗಳ ಅಂತ್ಯದವರೆಗೆ ಹೆಚ್ಚಿನ ತಾಪಮಾನ ವರದಿಯಾಗುವ ನಿರೀಕ್ಷೆ ಇದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದೆ. ಜನರು ಆರೋಗ್ಯದ ಮೇಲೆ ಹೆಚ್ಚು ಗಮನಹರಿಸಬೇಕು. ತಾಪಮಾನ ಹೆಚ್ಚಾದಂತೆ ಜನರಿಗೆ ಊತ, ತಲೆನೋವು, ವಾಕರಿಕೆ, ನಿರ್ಜಲೀಕರಣ, ಸುಸ್ತು, ವಾಂತಿ ಮತ್ತು ಬೆವರು ಸೇರಿ ಇತರೆ ಆರೋಗ್ಯ ಸಮಸ್ಯೆಗಳು ಕಾಡಲಿವೆ.