ಈ ಬಾರಿ ತೊಗರಿ ಬೆಳೆ ಉತ್ತಮ ಇಳುವರಿ ಬಂದಿರುವುದುದರಿಂದ ಬೆಳೆಗಾರರಿಗೆ ಬಂಪರ್ ನ್ಯೂಸ್ ಕೊಡುವುದಕ್ಕೆ ಸರಕಾರ ಮುಂದಾಗಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 10 ಕ್ವಿಂಟಲ್ ಬದಲಾಗಿ 20 ಕ್ವಿಂಟಲ್ ತೊಗರಿ ಖರೀದಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಬಾರಿ ಹೆಚ್ಚಿನ ಖರೀದಿಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಕಲಬುರಗಿ ನಗರದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಳೆದ ಬಾರಿ ರಾಜ್ಯ ಸರ್ಕಾರದ 300 ರೂಪಾಯಿ ಸೇರಿ ತೊಗರಿಗೆ ಒಂದು ಕ್ವಿಂಟಲ್‍ಗೆ 6,100 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನೀಡಲಾಗಿತ್ತು. ಈ ವರ್ಷ ಉತ್ತಮ ಮಳೆಯಾಗಿರುವುದರಿಂದ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಉತ್ತಮ ಇಳುವರಿ ಬಂದಿದೆ. ಹೆಚ್ಚೆಚ್ಚು ಖರೀದಿ ಮಾಡಬೇಕೆಂಬುದು ರೈತರ ಬೇಡಿಕೆ ಇದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ ಎಂದರು.
ಕಲಬುರಗಿ ಜಿಲ್ಲೆಯಲ್ಲಿ ತಲೆದೋರಿದ್ದ ಪ್ರವಾಹ ಸಂಬಂಧ 2.5 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಈ ಪರಿಹಾರ ಹಣದಲ್ಲಿ ಜೇವರ್ಗಿ ಮತ್ತು ಅಫಜಲಪುರ ನೆರೆಪೀಡಿತ ಪ್ರದೇಶಗಳಲ್ಲಿ ಸದ್ಯಕ್ಕೆ ತಾತ್ಕಾಲಿಕ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.