H3N2 ಸೋಂಕು ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಹೀಗಾಗಿ ಇಂದು ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಆರೋಗ್ಯ ಸಚಿವ ಸುಧಾಕರ್ ಮಹತ್ವದ ಸಭೆ ನಡೆಸಿದರು. ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, H3N2 ದೇಶದಲ್ಲಿ ಹೆಚ್ಚು ಸೋಂಕು ವರದಿಯಾಗುತ್ತಿರುವ ಕಾರಣ ಗಾಬರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಇನ್ನು ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿತ್ತು. ಆದರೆ ಇವಾಗ ಆಸ್ಪತ್ರೆಯಲ್ಲಿ ಮಾಸ್ಕ್ ಧರಿಸುತ್ತಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿ ಮಾಸ್ಕ್ ಗಳನ್ನು ಧರಿಸಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗುವುದು. H3N2 ಸೋಂಕು 15 ವರ್ಷದ ಕೆಳಗಿನ ಮಕ್ಕಳಿಗೆ ಹಾಗೂ 65 ವರ್ಷ ಮೇಲ್ಪಟ್ಟ ವೃದ್ದರಿಗೆ ಈ ಸೋಂಕು ಸುಲಭವಾಗಿ ತಗಲಬಹುದು. ಜತೆಗೆ ಗರ್ಭಿಣಿಯರಿಗೂ ಸೊಂಕು ತಗುಲುವ ಸಾಧ್ಯತೆಗಳು ಇವೆ. ಈ ನಿಟ್ಟಿನಲ್ಲಿ ಇವರೆಲ್ಲ ಎಚ್ಚರಿಕೆಯಿಂದ ಇರಬೇಕು ಎಂದರು