ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಅನ್ಯ ರಾಜ್ಯಗಳ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾಷ್ಟ್ರ ಮಟ್ಟದ ಚುನಾವಣೆಯಲ್ಲೂ ಪ್ರಭಾವ ಬೀರಬಹುದು ಎಂದು ವಿಶ್ಲೇಷಣೆ ಶುರುವಾಗಿದೆ. NCP ಮುಖ್ಯಸ್ಥ ಶರದ್ ಪವಾರ್ ಅವರು, CPI ನಾಯಕ D. ರಾಜಾ ಅವರೊಂದಿಗೆ ಮಾತುಕತೆ ನಡೆಸಿ, ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಿದ್ದಾರೆ. ಬಿಜೆಪಿಗೆ ಪರ್ಯಾಯ ನಾಯಕತ್ವ ನೀಡುವ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ. ಬಳಿಕ ಮಾತನಾಡಿದ ಶರದ್ ಪವಾರ್, ಕರ್ನಾಟಕದ ಮಾದರಿಯನ್ನು ಇತರ ರಾಜ್ಯಗಳಲ್ಲಿ ಜಾರಿಗೊಳಿಸುವ ಅಗತ್ಯವಿದೆ ಮತ್ತು ಅದಕ್ಕಾಗಿ ಸಮಾನ ಮನಸ್ಕ ಪಕ್ಷಗಳು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಲು ಶ್ರಮಿಸಬೇಕು ಎಂದಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಇತರ ರಾಜ್ಯಗಳಲ್ಲಿ ಬಿಜೆಪಿಯನ್ನು ಮಣಿಸಲು, ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸಮಾನ ಮನಸ್ಕ ಪಕ್ಷಗಳು ಸಮಾನ ಕನಿಷ್ಠ ಯೋಜನೆಯನ್ನು ರಚಿಸಿಕೊಳ್ಳಬೇಕು. ಈ ದೆಸೆಯಲ್ಲಿ ನಾವು ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದ್ದಾರೆ