ಬೆಂಗಳೂರು : ಕನ್ನಡ ರಾಜ್ಯೋತ್ಸವಕ್ಕೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಸರ್ಕಾರ ಹೊರಡಿಸಿದ ಸುತ್ತೋಲೆಯ ವಿರುದ್ಧ ನಾಡಜನರು ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಈ ಆದೇಶವನ್ನು ಸರ್ಕಾರ ಹೊರಡಿಸಲೇ ಇಲ್ಲ. ಕೊಪ್ಪಳ ಜಿಲ್ಲಾ ಶಿಕ್ಷಣಾಧಿಕಾರಿ ಹೀಗೊಂದು ಸೂಚನೆ ನೀಡಿದ್ದರು. ಅದರಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ನಾಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ರಾಷ್ಟ್ರಧ್ವಜ ಹಾರಿಸಬೇಕು ಎಂದು ಹೇಳಲಾಗಿತ್ತು. ಆದರೆ ಕನ್ನಡ ಧ್ವಜ ಹಾರಿಸಬೇಕೆಂಬುದರ ಬಗ್ಗೆ ಸುತ್ತೋಲೆಯಲ್ಲಿ ಎಲ್ಲಿಯೂ ಉಲ್ಲೇಖವಾಗಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಅಲ್ಲದೇ ಇದನ್ನು ಸರ್ಕಾರವೇ ಮಾಡಿದೆ ಎನ್ನಲಾಗಿದೆ. ಒಬ್ಬ ಅಧಿಕಾರಿ ಮಾಡಿದ ಎಡವಟ್ಟಿಗೆ ಸರ್ಕಾರವೇ ಅದನ್ನು ಮಾಡಿದೆ ಎಂಬ ಅರ್ಥ ಕಲ್ಪಿಸುವುದು ಸರಿಯಲ್ಲ. ಈ ರೀತಿ ಆದೇಶ ಹೊರಡಿಸಿದ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.