Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜೆಡಿಎಸ್ ಬಿಜೆಪಿಯ ಬಿಟೀಂ ಎಂದಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಎಂದು ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೆಣಕಿದ್ದಾರೆ. ಅಪರೇಷನ್ ಕಮಲದ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ. ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್ಮೆಂಟ್ ವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? ಎಂದು ತಿವಿದಿದ್ದಾರೆ.