ಕೊರೊನಾ ವಿಶ್ವವ್ಯಾಪಿಯಾಗಿ ಹರಡುತ್ತಿರುವ ಮಧ್ಯೆ ಅನೇಕ ಬಹುರಾಷ್ಟ್ರೀಯ ಕಂಪೆನಿಗಳು ಚೈನಾ ದೇಶದಿಂದ ಹೊರಬರುತ್ತಿವೆ.
ಮುಂಬರುವ ಒಂದು ವರ್ಷದ ಅವಧಿಯಲ್ಲಿ ಭಾರತದ ವಿವಿಧೆಡೆ ಮತ್ತು ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಅಂತಾರಾಷ್ಟ್ರೀಯ ಬಂಡವಾಳ ಹೂಡಿಕೆದಾರರು ಉತ್ಸುಕರಾಗಿದ್ದಾರೆ. ಇವರನ್ನು ಸೆಳೆಯಲು ರಾಜ್ಯ ಸರ್ಕಾರದಿಂದ ಪ್ರತ್ಯೇಕ ಕಾರ್ಯಪಡೆ ರಚಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಆಟೋಮೊಬೈಲ್ ಸೇರಿದಂತೆ ಹಲವು ಉದ್ಯಮಗಳಲ್ಲಿ ಕರ್ನಾಟಕ ರಾಜ್ಯವು ದೇಶದ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದೆ. ಕೊರೊನಾ ಹರಡುವಿಕೆ ನಂತರ ಜಪಾನ್, ಅಮೇರಿಕಾ ಸೇರಿದಂತೆ ಅನೇಕ ರಾಷ್ಟ್ರಗಳು ಚೈನಾ ದೇಶದ ಬಗ್ಗೆ ಅಸಮಾಧಾನ ಹೊಂದಿವೆ.
ಚೈನಾದಲ್ಲಿರುವ ಬಹುರಾಷ್ಟ್ರೀಯ ಕಂಪೆನಿಗಳನ್ನು ಅಲ್ಲಿಂದ ಬೇರೆ ದೇಶಗಳಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿವೆ. ಜಪಾನ್ ದೇಶವು ಚೈನಾದಿಂದ ಹೊರಬರುವ ಕಂಪೆನಿಗಳಿಗೆ ಆರ್ಥಿಕ ನೆರವನ್ನೂ ಕೂಡ ಘೋಷಣೆ ಮಾಡಿದೆ. ನೂರಾರು ಅಂತಾರಾಷ್ಟ್ರೀಯ ಹೂಡಿಕೆದಾರರು ಭಾರತದಲ್ಲಿ ವಿಶೇಷವಾಗಿ ಕರ್ನಾಟಕದಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ ಎಂದಿದ್ದಾರೆ.