ರಾಜ್ಯಾದ್ಯಂತ ಜುಲೈ 8ರವರೆಗೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ,ಮುಖ್ಯವಾಗಿ, ಗದಗ ಮತ್ತು ಕಾರವಾರದಲ್ಲಿ 4 ಸೆಂ.ಮೀ, ಕೊಪ್ಪಳ ಜಿಲ್ಲೆಯಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದರು.
ಶ್ರೀಲಂಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಜುಲೈ 4 ರಿಂದ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿ
ದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದರು.
ರಾಜ್ಯಾದ್ಯಂತ ಜುಲೈ 5ರಿಂದ ಮಳೆಯ ಪ್ರಮಾಣ ಏರಿಕೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 7 ಮತ್ತು 8 ರಂದು ಎಲ್ಲೊ ಅಲರ್ಟ್ ಕೊಡಲಾಗಿದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದರು.