ಕಳಸಾ ಬಂಡೂರಿ ಹಾಗೂ ಮಹದಾಯಿ ವಿಚಾರದಲ್ಲಿ ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳಲ್ಲಿ ಬದ್ಧತೆ ಇಲ್ಲ. ಇದು ಅತ್ಯಂತ ನೋವಿನ ಸಂಗತಿ ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಬೇಸರ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರು ಜನಪ್ರತಿನಿಧಿಗಳು ಒಗ್ಗಟ್ಟು ಪ್ರದರ್ಶನ ಮಾಡುತ್ತಾರೆ. ಆದರೆ, ಕಳಸಾ ಬಂಡೂರಿ ಹಾಗೂ ಮಹದಾಯಿ ವಿಚಾರವನ್ನು ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳ ಬೆಂಬಲಿಸದಿರುವುದು ನೋವಿನ ಸಂಗತಿ ಎಂದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರು ಸಹ ಎಲ್ಲ ಪಕ್ಷಗಳು ಪಕ್ಷ ಭೇದ ಮರೆತು ಒಂದು ದಿನದ ತುರ್ತು ಅಧಿವೇಶನ ಕರೆದು ಒಕ್ಕೊರಲಿನ ನಿರ್ಣಯ ಕೈಗೊಂಡ ಮಾದರಿಯಲ್ಲೇ ಮಹದಾಯಿ ವಿಚಾರಕ್ಕೆ ಇತಿಶ್ರೀ ಹಾಡಬೇಕು ಎಂದು ತಿಳಿಸಿದರು.
ಮಹದಾಯಿ ಹೋರಾಟದಲ್ಲಿ ದೌರ್ಜನ್ಯಕ್ಕೊಳಗಾದ 187 ರೈತರ ಮೇಲಿನ ಪ್ರಕರಣ ವಾಪಸ್ ಪಡೆಯಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಪ್ರಕರಣ ವಾಪಸ್ ಪಡೆದಿಲ್ಲ. ಹೀಗಾಗಿ ರೈತರು ಕೋರ್ಟ್ ಹಾಗೂ ಕಚೇರಿಗಳಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ