ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಯ ಸಂಕಟಕ್ಕೆ ಕಾಂಗ್ರೆಸ್ ಸಿಲುಕಿದೆ.
ರಾಜ್ಯ ಕಾಂಗ್ರೆಸ್ ನಾಯಕರು ಸಂಪುಟ ವಿಸ್ತರಣೆಗೆ ಹೈಕಮಾಂಡ್ನ ಕದ ತಟ್ಟಲು ಮುಂದಾಗಿದ್ದು, ಸಂಪುಟ ವಿಸ್ತರಣೆಯಾಗದಿದ್ದರೆ ಶಾಸಕರ ಅತೃಪ್ತಿ, ಅಸಮಾಧಾನ ಸ್ಫೋಟವಾಗಲಿದೆ. ಬಿಜೆಪಿ ಸೆಳೆತದಿಂದ ಶಾಸಕರನ್ನು ದೂರ ಇಡುವುದು ಕಷ್ಟವಾಗುತ್ತದೆ ಎಂಬುದನ್ನು ಹೈಕಮಾಂಡ್ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ.
ಸಚಿವಾಕಾಂಕ್ಷಿ ಶಾಸಕರುಗಳು ಬೆಳಗಾವಿಯಲ್ಲಿ ಡಿ. 10 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಲೇಬೇಕು. ಇಲ್ಲದಿದ್ದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಸಂಕಟವನ್ನು ಬಗೆಹರಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಪಕ್ಷದ ಹೈಕಮಾಂಡ್ನ್ನು ಭೇಟಿ ಮಾಡಿ ಚರ್ಚೆ ನಡೆಸಲು ನಿರ್ಧರಿಸಿದ್ದಾರೆ.
ಸಂಪುಟ ವಿಸ್ತರಣೆಯಾಗದಿದ್ದರೆ ಪಕ್ಷದ ಶಾಸಕರಲ್ಲಿ ಒಗ್ಗಟ್ಟು ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ. ಇದರಿಂದ ಸರ್ಕಾರಕ್ಕೆ ಕಂಟಕವಾಗಬಹುದು. ಹಾಗಾಗಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿ ಎಂದು ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್ಗೆ ಮನವಿ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವಿಷಯ ಕಾಂಗ್ರೆಸ್ ಗೆ ಸದ್ಯ ಬಿಸಿ ತುಪ್ಪದಂತಾಗಿದೆ.