ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮತಾಂತರ ನಿಷೇಧ ಮಸೂದೆ ಬಗ್ಗೆ ಚರ್ಚೆಯ ಕಾವು ಜೋರಾಗಿದೆ.
ಒಂದೆಡೆ ಸರ್ಕಾರ ಮಸೂದೆ ಜಾರಿಗೆ ಸಜ್ಜಾಗಿದ್ದರೆ, ಮತ್ತೊಂದೆಡೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದರ ಮಧ್ಯೆ ಬೆಳಗಾವಿ ಅಧಿವೇಶನದಲ್ಲಿಯೇ ನೂರಕ್ಕೆ ನೂರರಷ್ಟು ಮತಾಂತರ ನಿಷೇಧ ಮಸೂದೆಯನ್ನು ಅಂಗೀಕರಿಸುತ್ತೇವೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಈ ರೀತಿಯ ಗಲಭೆ ಮಾಡುವ ಪ್ರಯತ್ನ ನಡೆಯುತ್ತಿದೆ. ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ವಿಧಾನ ಮಂಡಲದಲ್ಲಿ ಸುದೀರ್ಘ ಚರ್ಚೆ ನಡೆಸುತ್ತೇವೆ ಎಂದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸುವ ಕೆಲಸವಾಗಲಿದೆ. ಅಲ್ಲದೇ ಈಗಾಗಲೇ 27 ಮಂದಿಯನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.