ನಾವಿನ್ನೂ ಜನತೆಯ ವಿಶ್ವಾಸ ಉಳಿಸಿಕೊಂಡಿದ್ದೇವೆ. ಅದಕ್ಕೆ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಮಹಾರಾಣಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನುಡಿದಂತೆ ನಡೆದಿದ್ದೇವೆ. ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಬಾಕಿಯಿರುವ ಭರವಸೆಗಳನ್ನು ವರ್ಷಾಂತ್ಯದೊಳಗೆ ಈಡೇರಿಸುತ್ತೇವೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರಕಾರ ದಲಿತರು, ಹಿಂದುಳಿದವರು, ಶೋಷಿತರು, ರೈತರು ಮತ್ತು ಬಡವರ ಏಳಿಗೆಗಾಗಿ ಶ್ರಮಿಸುತ್ತಿದೆ. ಭ್ರಷ್ಟಾಚಾರ ಮುಕ್ತ ಸರಕಾರ ನೀಡಿದ್ದೇವೆ. ಇಲ್ಲಿಯವರೆಗೆ ಯಾವ ಸರಕಾರವು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಭರವಸೆಗಳನ್ನು ಕಸದ ಬುಟ್ಟಿಯಲ್ಲಿ ಹಾಕಿದ್ದವು ಎಂದು ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
ನಟಸಾರ್ವಭೌಮ ಡಾ.ರಾಜಕುಮಾರ್ ಅಭಿಮಾನಿಗಳನ್ನು ದೇವರು ಎನ್ನುತ್ತಿದ್ದರು. ನಾವು ಮತದಾರರನ್ನು ದೇವರು ಎನ್ನುತ್ತೇವೆ. ಮತದಾರರು ನಮ್ಮ ಕೈ ಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.