ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಉಡಾಫೆ ಹೇಳಿಕೆ ನೀಡಿರುವ ಡಾ.ಜಿ.ಪರಮೇಶ್ವರ್ ಗೃಹ ಖಾತೆ ನಿಭಾಯಿಸಲು ವಿಫಲರಾಗಿದ್ದಾರೆ. ಅವರು ಈ ಕೂಡಲೇ ತಮ್ಮ ಸ್ಧಾನಕ್ಕೆ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿವೆ. ಗೃಹ ಖಾತೆ ನಿಭಾಯಿಸಲು ಡಾ.ಜಿ.ಪರಮೇಶ್ವರ್ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜಧಾನಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ನಡೆಯಲು ತುಂಡುಡುಗೆ ಕಾರಣವೆಂದು ಜನಪ್ರತಿನಿಧಿಯೊಬ್ಬರು ನೀಡಿದ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಯುವತಿಯರು ಯಾವುದಾದರು ಉಡುಪು ತೊಡಲಿ. ಆದರೆ, ಈ ರೀತಿಯ ಹೇಳಿಕೆ ನೀಡಬಾರದು ಎಂದು ಹೇಳಿದರು.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ