ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ 0-6 ತಿಂಗಳೊಳಗಿನ ಶಿಶುಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ರಾಗಿ ಗಂಜಿ ಕುಡಿಸಿದ್ದಾರೆ.
ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪೋಷಣ ಪಕ್ವಾಡ ಯೋಜನೆಯಡಿ 0-6 ತಿಂಗಳೊಳಗಿನ ಶಿಶುಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ ಅವರು “ರಾಗಿ ಗಂಜಿ” ಯನ್ನು ಕುಡಿಸುವ ಮೂಲಕ ಯೋಜನೆಗಳ ಅರಿವು ಮೂಡಿಸಿದರು.
ಅಫಜಲಪೂರ ಶಾಸಕ ಎಂ.ವೈ.ಪಾಟೀಲ, ಜಿಲ್ಲಾ ಪಂಚಾಯತಿಯ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದರಾಮ ಪ್ಯಾಟಿ ಅವರು ಜಿಲ್ಲಾ ಪಂಚಾಯತ್ ಅಧ್ಯಕ್ಷರೊಂದಿಗೆ ಮಕ್ಕಳಿಗೆ ರಾಗಿ ಗಂಜಿ ಕುಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸ್ತ್ರೀ ಶಕ್ತಿಗಳ ಒಕ್ಕೂಟ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಸ್ತ್ರೀಶಕ್ತಿ ಗುಂಪುಗಳ ಸದಸ್ಯರ ಸಮಾವೇಶ ಹಾಗೂ ಪೋಷಣ ಪಕ್ವಾಡ ಕಾರ್ಯಕ್ರಮವು ಹಲವು ವೈಶಿಷ್ಟ್ಯಕ್ಕೆ ಸಾಕ್ಷಿಯಾಯಿತು.