ಹೈದರಾಬಾದ್: ಇಲ್ಲಿನ ಐತಿಹಾಸಿಕ ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 17 ಮಂದಿ ಸಜೀವ ದಹನವಾಗಿದ್ದಾರೆ.
ಬೆಳಿಗ್ಗೆ 5:30ರ ಸುಮಾರಿಗೆ ಘಟನೆ ನಡೆದಿದೆ. ಗುಲ್ಜಾರ್ ಹೌಸ್‌ನಲ್ಲಿ 30ಕ್ಕೂ ಹೆಚ್ಚು ಮಂದಿ ಇರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡದ ಪರಿಣಾಮ ಉಸಿರಾಟದ ತೊಂದರೆಯಿಂದಾಗಿ 16ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಗುಲ್ಜಾರ್ ಹೌಸ್‌ನ ಮೊದಲ ಮಹಡಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಕಿಷನ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನಿಂದ ಕಾರ್ಯಾಚರಣೆ ಮುಂದುವರಿದಿದೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ.