ಬಿಜೆಪಿ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕಮಲದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಷ್ಟ್ರದ್ರೋಹಿ ಪಟ್ಟವನ್ನು ಕಟ್ಟಿದ್ದಾರೆ. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಪ್ರಥಮ ಪ್ರಚಾರವನ್ನು ನಡೆಸಿದ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಪತಿ-ಪತ್ನಿಯರಿದ್ದಂತೆ ಎಂದಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕೇಜ್ರಿವಾಲ್, ಭಾನುವಾರ ಸೂರತ್‌ನಲ್ಲಿ ಚುನಾವಣಾ ಪ್ರಚಾರವನ್ನು ಕೈಗೊಂಡರು. ಈ ಸಂದರ್ಭದಲ್ಲಿ ಅಮಿತ್ ಶಾ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಕಮಲ ನೇತೃತ್ವದ ಸರ್ಕಾರದ ಮೇಲೆ ಈಗಾಗಲೇ ಮುನಿಸಿಕೊಂಡಿರುವ ಪಟೇದಾರ್ ಸಮುದಾಯವನ್ನು ಒಲಿಸಿಕೊಳ್ಳುವ ಪ್ರಯತ್ನವನ್ನು ಮಾಡಿದರು.
ಅಮಿತ್ ಶಾ ಅವರನ್ನು ರಾಷ್ಟ್ರದ್ರೋಹಿ ಎಂದ ಅವರು ಪಟೇದಾರ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಅವರನ್ನು ದೇಶಭಕ್ತ ಎಂದು ಎಂದು ಹೊಗಳಿದರು.
ಕಮಲ ಮತ್ತು ಕೈ ಗಂಡ- ಹೆಂಡತಿಯರಿದ್ದರಂತೆ ಎಂದ ಕೇಜ್ರಿವಾಲ್, ಚುನಾವಣೆಯ ಬಳಿಕ ವಿಧಾನಸಭೆಯಲ್ಲಿ ಕುಳಿತುಕೊಳ್ಳುವವರು ಆಪ್ ಸದಸ್ಯರು, ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರಲ್ಲ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ