Publish Date: Fri, 26 Aug 2022 (15:12 IST)
Updated Date: Fri, 26 Aug 2022 (16:14 IST)
ನವದೆಹಲಿ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಬಿಗ್ ರಿಲೀಫ್ ಸಿಕ್ಕಿದೆ. 2007ರಲ್ಲಿ ದ್ವೇಷ ಭಾಷಣ ಆರೋಪದ ಮೇಲೆ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
2007ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಯೋಗಿ ಆದಿತ್ಯನಾಥ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿತ್ತು.
ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿ ವಜಾ ಮಾಡಿದೆ.
ಸಾಕ್ಷ್ಯಾಧಾರಗಳ ಕೊರತೆಯ ಕಾರಣಕ್ಕೆ 2017ರ ಮೇನಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿತ್ತು. 2018ರಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಯಿತು.