ನವದೆಹಲಿ : ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದು, ಈ ಬಾರಿ 75ನೇ ಅಮೃತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಭಾರತ ಸಜ್ಜಾಗಿದೆ.
ಆದರೆ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ದಾಳಿ ನಡೆಸುವುದಾಗಿ ಉಗ್ರ ಸಂಘಟನೆಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭಾರೀ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.
ದೆಹಲಿಯ ಮಧ್ಯಭಾಗದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಾದ್ಯಂತ ಅಣುಕು ಪ್ರದರ್ಶನ ಮಾಡಲಾಗಿದ್ದು, ಜನಸಂದಣಿ ಹಾಗೂ ಸೂಕ್ಷ್ಮವಲಯಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕಾಗಿ ದೆಹಲಿಯ ಕೆಂಪುಕೋಟೆ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.