ನವದೆಹಲಿ : ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್ಗೆ ಸ್ಥಳಾಂತರಿಸಲಾಗಿದೆ.
ಲಾಲೂ, ಮೇವು ಹಗರಣ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಬಹು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ಎರಡು ದಿನಗಳಿಂದ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಟ್ಟ ಪರಿಣಾಮ ದೆಹಲಿಯ ಏಮ್ಸ್ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲೂ ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.
ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆ ಎದುರಿಸುತ್ತಿದ್ದು, ಅಲ್ಲದೇ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಹಾಗಾಗಿ ಅವರ ವಯಸ್ಸನ್ನು ಪರಿಗಣಿಸಿ,
ಇನ್ನಷ್ಟು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ನಾವು ಅವರನ್ನು ರಿಮ್ಸ್ನಿಂದ ದೆಹಲಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ರಿಮ್ಸ್ ನಿರ್ದೇಶಕ ಡಾ.ಕಾಮೇಶ್ವರ್ ಪ್ರಸಾದ್ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.