ಭುವನೇಶ್ವರ: ಒಡಿಶಾದ ಮುಖ್ಯಮಂತ್ರಿಯಾಗಿ ಬುಡಕಟ್ಟು ಜನಾಂಗದ ನಾಯಕ ಮೋಹನ್ ಚರಣ್ ಮಾಝಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ರಾಜ್ಯದ ಬಿಜೆಪಿಯ ಮೊದಲ ಸಿಎಂ ಕೂಡಾ ಆಗಿದ್ದಾರೆ.
ಭುವನೇಶ್ವರದ ಜನತಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಾಝಿ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಉಪ ಮುಖ್ಯಮಂತ್ರಿಗಳಾಗಿ ಕೆ.ವಿ.ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಒಡಿಶಾದ ಮಾಜಿ ಸಿಎಂ ನವೀನ್ ಪಟ್ನಾಯಕ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
147 ಸದಸ್ಯ ಬಲದ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತ ಪಡೆದರೆ, ಅಧಿಕಾರ ಕಳೆದುಕೊಂಡ ಬಿಜೆಡಿ 51 ಸ್ಥಾನಗಳನ್ನು ಮಾತ್ರ ಗಳಿಸಿತ್ತು.