ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಗ್ರೀನ್ ಸಿಗ್ನಲ್ ನೀಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಮಸೂದೆಯನ್ನು ತರಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದರು. ಪದೇ ಪದೇ ಚುನಾವಣೆ ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಮೋದಿ ಭಾಷಣದಲ್ಲಿ ಹೇಳಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಒಂದು ದೇಶ, ಒಂದು ಚುನಾವಣೆ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ.