ಭುವನೇಶ್ವರ : ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ದುರಂತಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 233 ಕ್ಕೆ ಏರಿದೆ. ಅಲ್ಲದೇ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಚೆನ್ನೈ-ಕೊರೊಮಂಡೆಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ಯಶವಂತಪುರ ಪ್ಯಾಸೆಂಜರ್ ರೈಲು ಹಾಗೂ ಸರಕು ಸಾಗಾಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚುತ್ತಿದೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂ. ಪರಿಹಾರವನ್ನು ರೈಲ್ವೇ ಇಲಾಖೆ ಘೋಷಿಸಿದೆ.