ನವದೆಹಲಿ : ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ಹಿನ್ನಲೆಯಲ್ಲಿ ಮಾಜಿ ಸಂಸದರಿಗೆ ಸರ್ಕಾರಿ ನಿವಾಸವನ್ನು ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.
ಮೇ 25ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 16ನೇ ಲೋಕಸಭೆಯನ್ನು ವಿಸರ್ಜನೆ ಮಾಡಿದ್ದರು. ನಿಯಮದ ಪ್ರಕಾರ, ಲೋಕಸಭೆ ವಿಸರ್ಜನೆಗೊಂಡ 1 ತಿಂಗಳ ಒಳಗೆ ಮಾಜಿ ಸಂಸದರು ಸರ್ಕಾರಿ ನಿವಾಸಗಳನ್ನು ಖಾಲಿ ಮಾಡಬೇಕು.
ಆದರೆ ಎರಡನೇ ಬಾರಿಗೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆಯುತ್ತಾ ಬಂದಿದ್ದರೂ ಮಾಜಿ ಸಂಸದರು ಮಾತ್ರ ನಿವಾಸ ಖಾಲಿ ಮಾಡಿಲ್ಲ, ಇದರಿಂದ ಹೊಸ ಸಂಸದರಿಗೆ ವಸತಿ ಕಲ್ಪಿಸುವುದು ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಮನೆ ಖಾಲಿ ಮಾಡಲು ಏಳು ದಿನಗಳ ಗಡುವು ನೀಡಲಾಗಿದ್ದು, ಮೂರು ದಿನದೊಳಗೆ ನೀರು ಮತ್ತು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಕೇಂದ್ರ ಸೂಚನೆ ನೀಡಿದೆ ಎನ್ನಲಾಗಿದೆ.