ಉತ್ತರಪ್ರದೇಶದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ಚುನಾವಣಾ ಕಾರ್ಯತಂತ್ರ ಮತ್ತು ಪ್ರಣಾಳಿಕೆ ಸಂಬಂಧ ಚರ್ಚಿಸಲು ಇಂದು ಬಿಜೆಪಿ ನಾಯಕರು ಬಹುಮುಖ್ಯ ಸಭೆ ನಡೆಸಲಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 58 ವಿಧಾನಸಭಾ ಕ್ಷೇತ್ರಗಳಲ್ಲಿ 57 ಅಭ್ಯರ್ಥಿಗಳು ಮತ್ತು ಎರಡನೇ ಹಂತದಲ್ಲಿ ಇಲೆಕ್ಷನ್ ನಡೆಯಲಿರುವ 55 ಕ್ಷೇತ್ರಗಳ ಪೈಕಿ 48 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ.
ಈ ಮಧ್ಯೆ ಉತ್ತರಪ್ರದೇಶದಲ್ಲಿ ಬಿಜೆಪಿ ಬಿಟ್ಟು ಹೋಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಅದೆಲ್ಲದರ ಬೆನ್ನಲ್ಲೇ ಇಂದು ಬಹುಮುಖ್ಯ ಸಭೆ ಕರೆದಿದೆ.
ಉತ್ತರಪ್ರದೇಶದಲ್ಲಿ ಒಟ್ಟು ಏಳು ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಎರಡು ಹಂತದ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದರೂ, ಇನ್ನೂ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕಿದೆ. ಉಳಿದ 5 ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡುವ ಕೆಲಸ ಬಾಕಿ ಇದೆ.