ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚುನಾವಣಾ ಆಯೋಗ ಸ್ಪಷ್ಟನೆ ಕೇಳಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಚುನಾವಣಾ ಆಯೋಗ, ದೂರಿನ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಅದರಂತೆ ನವೆಂಬರ್ 18ರ ಮಧ್ಯಾಹ್ನ 1ರ ಒಳಗೆ ಸ್ಪಷ್ಟನೆ ನೀಡುವಂತೆ ಎರಡೂ ಪಕ್ಷದ ಸದಸ್ಯರನ್ನು ಕೇಳಿಕದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕ ಸೌಹಾರ್ದತೆ ಉಂಟಾಗದಂತೆ ತಾರಾ ಪ್ರಚಾರಕರು ಮತ್ತು ನಾಯಕರನ್ನು ಹಿಡಿತದಲ್ಲಿಟ್ಟುಕೊಳ್ಳುವಂತೆ ಆಯೋಗ ನೀಡಿದ್ದ ಈ ಹಿಂದಿನ ಸಲಹೆಯನ್ನು ಅಧ್ಯಕ್ಷರುಗಳಿಗೆ ನೆನಪಿಸಿದೆ.
ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಸಂವಿಧಾನದ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಹುಲ್ ಗಾಂಧಿ ಹೇಳಿಕೆಗಳು ರಾಜ್ಯಗಳ ನಡುವೆ ವೈಷಮ್ಯವನ್ನು ಬಿತ್ತುವ ಉದ್ದೇಶವನ್ನು ಹೊಂದಿವೆ ಎಂದು ಬಿಜೆಪಿ ಆರೋಪಿಸಿದೆ.