ದೇಶಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಇಂದು 73 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, 15 ಜಿಲ್ಲೆಗಳಿಂದ 2.57ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 77 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮುಂಜಾನೆ 7 ಗಂಟೆಗೆ ಮತದಾನದ ಪ್ರಕ್ರಿಯೆ ಆರಂಭವಾಗಿದ್ದು ಸಂಜೆ 5 ಕ್ಕೆ ಮುಕ್ತಾಯಗೊಳ್ಳಲಿದೆ.
ಪಂಚರಾಜ್ಯಗಳ ಪೈಕಿ ಈಗಾಗಲೇ ಗೋವಾ ಮತ್ತು ಪಂಜಾಬ್‌ನಲ್ಲಿ ಏಕಹಂತದಲ್ಲಿಯೇ ಚುನಾವಣೆ ಮುಗಿದಿದ್ದು, ಯುಪಿಯಲ್ಲಿ 7 ಹಂತಗಳಲ್ಲಿ ನಡೆಯಲಿದೆ.
ಇನ್ನು, ಮತದಾನದಲ್ಲಿ ಹೆಚ್ನಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಚಂಡ ಗೆಲುವನ್ನು ದಾಖಲಿಸಿದ್ದ ಬಿಜೆಪಿಯನ್ನು ಬಗ್ಗುಬಡಿಯಲು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ.