ಬೆಂಗಳೂರು:ಸೆಪ್ಟೆಂಬರ್ 21 ರಿಂದ 30ರವರೆಗೆ ಮೈಸೂರು ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಒಟ್ಟು 15 ಕೋಟಿ ಅನುದಾನ ನೀಡಲು ನಿರ್ಧರಿಸಿದ್ದು, ಸೆಪ್ಟೆಂಬರ್ 21ರಂದು ಬೆಳಗ್ಗೆ 9.15ಕ್ಕೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಸರಳ ಹಾಗೂ ವಿಜೃಂಭಣೆಯಿಂದ ದಸರಾ ಆಚರಣೆಗೆ ತೀರ್ಮಾನಿಸಲಾಗಿದೆ.
ಸೆ.21ರಂದು ಬೆಳಗ್ಗೆ ದಸರಾ ಉದ್ಘಾಟನೆಯಾಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೂ ಅಂದೇ ಚಾಲನೆ ನೀಡಲಾಗುವುದು. ಅಂತೆಯೇ ನವರಾತ್ರಿಯು ಸೆ.29ರಂದು ಅಂತ್ಯಗೊಳ್ಳುತ್ತದೆ. ವಿಜಯ ದಶಮಿ ಅಂಗವಾಗಿ ಸೆ.30ರಂದು ಮಧ್ಯಾಹ್ನ 1.15 ಕ್ಕೆ ನಂದಿ ಪೂಜೆ, 3.15ಕ್ಕೆ ಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರನ್ನಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಹಾಗೂ ಉಪಾಧ್ಯಕ್ಷರನ್ನಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ನೇಮಕ ಮಾಡಲಾಗಿದೆ. ಇವರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನು ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದ್ದಾರೆ.