Publish Date: Sun, 10 Sep 2023 (15:24 IST)
Updated Date: Sun, 10 Sep 2023 (15:58 IST)
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಹಾಗೂ ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.