ನವದೆಹಲಿ(ಜು.30): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡನೇ ದಿನ ಬಸವರಾಜ್ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ಈ ವೇಳೆ ನೂತನ ಸಿಎಂಗೆ ಪ್ರಧಾನಿ ಮೋದಿ ಶುಭಕೋರಿದ್ದಾರೆ. ಇಷ್ಟೇ ಅಲ್ಲ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದಿಂದ ಎಲ್ಲಾ ಸಹಕಾರ ನೀಡುವುದಾಗಿ ಮೋದಿ ಭರವಸೆ ನೀಡಿದ್ದಾರೆ.
• ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ
• ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಶುಭಕೋರಿದ ಪ್ರಧಾನಿ
ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಬೆಂಬಲದ ಭರವಸೆ ನೀಡಿದ ಮೋದಿ
ಇಂದು(ಜು.30) ದೆಹಲಿಗೆ ತೆರಳಿದ ಬಸವರಾಜ ಬೊಮ್ಮಾಯಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾದ ಬೊಮ್ಮಾಯಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ವೇಳೆ ಸವಾಲುಗಳನ್ನು ಎದುರಿಸಿ ಉತ್ತಮ ಆಡಳಿತ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ.
ಈ ಭೇಟಿಯಲ್ಲಿ ಸಂಪುಟ ರಚನೆ ಕುರಿತು ಯಾವುದೇ ಚರ್ಚೆಯಾಗಿಲ್ಲ. ಸಿಎಂ ಸ್ಥಾನದ ಮಹತ್ತರ ಜವಾಬ್ದಾರಿ ನೀಡಿದ ಹಾಗೂ ಹಿರಿಯ ನಾಯಕರು, ವರಿಷ್ಠರು ಹಾಗೂ ಪ್ರಧಾನಿ ಮೋದಿಯ ಮಾರ್ಗದರ್ಶನ, ಆಶೀರ್ವಾದ ಪಡೆಯಲು ದೆಹಲಿಗೆ ತೆರಳುತ್ತಿರುವುದಾಗಿ ದೆಹಲಿ ಪ್ರವಾಸಕ್ಕೂ ಮೊದಲು ಬಸವರಾಜ ಬೊಮ್ಮಾಯಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಮೊದಲ ಭೇಟಿಯಲ್ಲಿ ಸಂಪುಟ ವಿಚಾರ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಮುಂದಿನ ವಾರ ಮತ್ತೆ ದೆಹಲಿಗೆ ತೆರಳಿ ಸಂಪುಟ ರಚನೆ ಕುರಿತು ವರಿಷ್ಠರ ಜೊತೆ ಚರ್ಚಿಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇತ್ತ ಸಂಪುಟ ಸೇರಲು ಶಾಸಕರು, ನಾಯಕರ ಕಸರತ್ತು ತೀವ್ರಗೊಂಡಿದೆ. ಹಲವರು ದೆಹಲಿಗೆ ತೆರಳಿ ಕೇಂದ್ರ ನಾಯಕರಿಗೆ ಒತ್ತಡ ಹೇರುವ ತಂತ್ರ ಮಾಡಿದ್ದಾರೆ.
ಹಲವು ನಾಯಕರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಂತ್ರಿಗಿರಿಗೆ ಪಟ್ಟು ಹಿಡಿದಿದ್ದಾರೆ. ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಇದೀಗ ಸಂಪುಟ ರಚನೆ ಸವಾಲಾಗಿದೆ.