ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ಹೊಸ ರೂಪಾಂತರ ಓಮಿಕ್ರಾನ್ ಈಗ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಆತಂಕ ಮೂಡಿಸಿದೆ.
ಬೆಂಗಳೂರಿನ ಇಬ್ಬರಿಗೆ ಕೊರೊನಾ ವೈರಸ್ನ ಹೊಸ ರೂಪಾಂತರ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. ಭಾರತದಲ್ಲೇ ಮೊದಲ ಬಾರಿಗೆ ಓಮಿಕ್ರಾನ್ ಪತ್ತೆಯಾಗಿರುವ ರಾಜ್ಯ ಕರ್ನಾಟಕವಾಗಿದೆ.
ಬೆಂಗಳೂರಿನವರಾದ ಇವರು ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ಇವರು ನವೆಂಬರ್ ಮೊದಲ ವಾರ ಬೆಂಗಳೂರಿಗೆ ಬಂದಿದ್ದರು. ಓಮಿಕ್ರಾನ್ ಪೀಡಿತರಲ್ಲಿ ಒಬ್ಬ ಬೊಮ್ಮನಹಳ್ಳಿ ಮೂಲದ ನಿವಾಸಿ ಎಂದು ತಿಳಿದುಬಂದಿದೆ.
ಇವರಿಬ್ಬರ ಸಂಪರ್ಕದಲ್ಲಿದ್ದವರನ್ನು ಗುರುತಿಸಲಾಗಿದ್ದು, ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಹೊಸ ರೂಪಾಂತರಿ ಪತ್ತೆಯಾಗಿರುವುದರಿಂದ ಸರ್ಕಾರ ಅಲರ್ಟ್ ಆಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ಕರೆಯುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಸಲಹೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.