ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು,
ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ಅಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗಧಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಪರೀಕ್ಷೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ.
ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ.
ಆದರೆ ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು(ಮೊಬೈಲ್, ಪೆನ್ ಡ್ರೈವ್, ಇಯರ್ ಫೆÇೀನ್, ಮೈಕ್ರೋಫೆÇೀನ್, ಬ್ಲೂಟೂತ್, ಕೈ ಗಡಿಯಾರ), ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು(ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.