ಬೆಂಗಳೂರು : ಹೊಸ ವರ್ಷ ಆರಂಭಕ್ಕೂ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡುವ ಪ್ರಸ್ತಾಪವನ್ನು ಇಂಧನ ಇಲಾಖೆ ಸಿದ್ಧಪಡಿಸಿದೆ.
ಗೃಹ ಬಳಕೆಯೂ ಸೇರಿದಂತೆ ಎಲ್ಲ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಇಂಧನ ದರ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಅದಕ್ಕಾಗಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಿದ್ದು, ಪ್ರತಿ ಯುನಿಟ್ಗೆ 70 ಪೈಸೆಯಿಂದ 2ರೂ. ವರೆಗೂ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ.
ಪ್ರತಿವರ್ಷ ನಡೆಸುವ ವಾರ್ಷಿಕ ದರ ಪರಿಷ್ಕರಣೆಯಲ್ಲಿ ವಿದ್ಯುತ್ ಶುಲ್ಕ ಹೆಚ್ಚಳದಿಂದ ಗ್ರಾಹಕರ ಮೇಲೆ ಹೊರೆ ಹೇರಲಾಗುತ್ತಿದೆ ಎಂಬ ಆರೋಪದಿಂದ ಮುಕ್ತವಾಗಲು ಇಂಧನ ಇಲಾಖೆ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಎಲ್ಲ ಸರಬರಾಜು ಕಂಪನಿಗಳಿಂದ ಕೆಇಆರ್ಸಿಗೆ ಸಲ್ಲಿಸುವ ಪ್ರಸ್ತಾವನೆಯಲ್ಲಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಿ ದರಪಟ್ಟಿಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.