ನವದೆಹಲಿ : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ನಿಬಾ ನಾಜ್ ಎಂಬ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ, ವಕೀಲ ಅನಸ್ ತನ್ವೀರ್ ಅವರ ಮೂಲಕ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಹಿಜಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಅಲ್ಲ. ತರಗತಿಗಳಲ್ಲಿ ಹಿಜಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಇಂದು ತೀರ್ಪು ನೀಡಿದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ.
ಹಿಜಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಲ್ಲ. ಹೀಗಾಗಿ ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ರಕ್ಷಿಸಲ್ಪಟ್ಟಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠವು ಇಂದು ಬೆಳಗ್ಗೆ ತೀರ್ಪು ನೀಡಿತ್ತು.
ಹಿಜಬ್ ಧರಿಸಿ ಪ್ರವೇಶ ನಿರಾಕರಿಸಿದ ಸರ್ಕಾರಿ ಪಿಯು ಕಾಲೇಜುಗಳ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.